ಕೀರ್ತನೆ. 121. ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ. ನನಗೆ ಸಹಾಯವು ಎಲ್ಲಿಂದ ಬರುವುದು? ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಯೆಹೋವನಿಂದಲೇ ನನಗೆ ಸಹಾಯವು ಬರುವುದು. ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ; ನಿನ್ನ ಸಂರಕ್ಷಕನು ನಿದ್ರೆಹೋಗುವುದಿಲ್ಲ. ಇಸ್ರೇಲಿನ ಸಂರಕ್ಷಕನು ತೂಕಡಿಸುವುದಿಲ್ಲ, ನಿದ್ರಿಸುವುದೂ ಇಲ್ಲ! ನಿನ್ನನ್ನು ಕಾಯುವವನು ಯೆಹೋವನೇ. ನಿನ್ನನ್ನು ರಕ್ಷಿಸಲು ಆತನು ನಿನ್ನ ಬಲಗಡೆಯಲ್ಲಿ ನಿಂತಿದ್ದಾನೆ. ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವುದಿಲ್ಲ. ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು; ನಿನ್ನ ಪ್ರಾಣವನ್ನು ಕಾಯುವನು. ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. ಆತನು ನಿನ್ನನ್ನು ಸದಾಕಾಲ ಕಾಪಾಡುವನು.